ತಂಬಾಕು ಮಾರಾಟಕ್ಕೂ ಕಡ್ಡಾಯ ಪರವಾನಿಗಿ ನೀಡಿ

ಬೆಂಗಳೂರು, ಫೆ.17- ರಾಜ್ಯದಲ್ಲಿ ತರಕಾರಿ, ಹಾಲು ಮಾರಾಟ ಮಳಿಗೆ ಮತ್ತು ಬೇಕರಿಯಂತಹ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳು ಸಿಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಕಡ್ಡಾಯವಾಗಿ ಪರವಾನಗಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ ಅವರು, ಮದ್ಯದ ಅಂಗಡಿಗಳಿಗೆ ಪರವಾನಗಿ ಇರುವಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿದರು.

ಅಪ್ರಾಪ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳು ಸಿಗದಂತೆ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೂಕ್ತ ನಿಯಮಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳು ಚಟದಿಂದ ದೂರವಾಗಲು ಸಹಕರಿಸಬೇಕು ಎಂದು ತಿಳಿಸಿದರು. ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ಕಡಿವಾಣ ಹಾಕಲು ಶೀಘ್ರ ಹೊಸ ಕಾನೂನು ಜಾರಿಗೆ ತರುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರಿಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು 3000ಕ್ಕೂ ಹೆಚ್ಚು ಪತ್ರಗಳನ್ನು ಬರೆಯುವ ಮೂಲಕ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ಮೋಕ್ಷಿತ್ ಮಾತನಾಡಿ, ನಾವು ಶಾಲೆಗೆ ಹೋಗುವಾಗ ಮತ್ತು ಅಕ್ಕಪಕ್ಕದ ರಸ್ತೆಗಳಲ್ಲಿ ಧೂಮಪಾನ ಮಾಡುವ ವ್ಯಕ್ತಿಗಳನ್ನು ನೋಡಿದರೆ ವಿದ್ಯಾರ್ಥಿಗಳಿಗೆ ಪ್ರಚೋದನೆ ಸಿಕ್ಕಂತಾಗುತ್ತದೆ. ಇಂತಹ ದುಶ್ಚಟಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಅಭಿಪ್ರಾಯ ತಿಳಿಸಿದರು.