Saturday, April 20, 2024
Homeರಾಜ್ಯರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು

ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು

ಬೆಂಗಳೂರು,ಏ.4- ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು. ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಚುನಾವಣೆಯ ಕಣ ರಂಗೇರಿತ್ತು. ಕೊನೆ ದಿನವಾದ್ದರಿಂದ ನಾಮಪತ್ರಗಳ ಸಲ್ಲಿಕೆಗಳ ಭರಾಟೆಯೂ ಜೋರಾಗಿತ್ತು.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಇಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ ತಿರಸ್ಕøತಗೊಂಡ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಸಂಸದರಾದ ಪ್ರಜ್ವಲ್ ರೇವಣ್ಣ , ತೇಜಸ್ವಿ ಸೂರ್ಯ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಡಾ.ಕೆ.ಸುಧಾಕರ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಎಂ.ಮಲ್ಲೇಶ್ ಬಾಬು ಸೇರಿದಂತೆ ಹಲವರು ಇಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಕೆಲವು ಅಭ್ಯರ್ಥಿಗಳು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮತ್ತೆ ಕೆಲವರು ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಸೇರಿದಂತೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಆಯಾ ಪಕ್ಷಗಳ ನಾಯಕರು ಮತ್ತು ಮುಖಂಡರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಕೆಲವರು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಾವೇಶಗಳನ್ನು ನಡೆಸಿ ಅಭ್ಯರ್ಥಿಗಳ ಪರ ಪ್ರಚಾರ ಹಾಗೂ ಮತ ಯಾಚನೆ ಮಾಡಲಾಯಿತು. ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕೆಲವು ಅಭ್ಯರ್ಥಿಗಳು ಅಬ್ಬರದ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿ ಮತ್ತೆ ನಾಮಪತ್ರ ಸಲ್ಲಿಸಿದರೆ, ಮತ್ತೆ ಕೆಲವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ರಾಜದತ್ತ ಒಡೆಯರ್ ಸೇರಿದಂತೆ ಬಿಜೆಪಿ-ಜೆಡಿಎಸ್ನ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್, ರಾಮನಗರ ಜಿಲ್ಲಾಕಾರಿ ಅವಿನಾಶ್ ಮೆನನ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಜುನಾಥ್ರವರ ಪತ್ನಿ ಅನಸೂಯ, ಶಾಸಕರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮುನಿರತ್ನ, ಎಂ.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.ಈಗಾಗಲೇ ಉಮೇದುವಾರಿಕೆಯನ್ನು ಸಲ್ಲಿಸಿದ್ದ ಡಿ.ಕೆ.ಸುರೇಶ್ರವರೂ ಸಹ ಇಂದು ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಪಕ್ಷದ ಮುಖಂಡರೊಂದಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.ಸಂಸದ ತೇಜಸ್ವಿ ಸೂರ್ಯ ಅವರು ಮಾಜಿ ಸಚಿವರಾದ ವಿ.ಸುನೀಲ್ಕುಮಾರ್, ಎಸ್.ಸುರೇಶ್ ಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ರೊಂದಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಇದೇ ಕ್ಷೇತ್ರದಿಂದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರೂ ಸಹ ತಮ್ಮ ಉಮೇದುವಾರಿಕೆಯನ್ನು ಇಂದು ಸಲ್ಲಿಸಿದರು. ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿದ್ದರು. ಈಗಾಗಲೇ ತಮ್ಮ ಉಮೇದುವಾರಿಕೆ ಸಲ್ಲಿಸಿರುವ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಅವರ ಪತ್ನಿ ಭವಾನಿ ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಹಾಜರಿದ್ದರು.

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮಾ.28 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನಿನ್ನೆಯವರೆಗೆ ಒಟ್ಟು 199 ಅಭ್ಯರ್ಥಿಗಳು 268 ನಾಮಪತ್ರ ಸಲ್ಲಿಸಿದ್ದಾರೆ.184 ಪುರುಷ ಹಾಗೂ 15 ಮಹಿಳಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಬಿಜೆಪಿ 24, ಕಾಂಗ್ರೆಸ್ 29, ಬಿಎಸ್ಪಿ 13, ಸಿಪಿಐಎಂ 1, ಜೆಡಿಎಸ್ 2, ಪಕ್ಷೇತರ 109 , ನೋಂದಾಯಿತ ಮತ್ತು ನೋಂದಾವಣೆಯಾಗದ ಪಕ್ಷಗಳ ಅಭ್ಯರ್ಥಿಗಳಿಂದ 90 ಸೇರಿದಂತೆ ಒಟ್ಟು 268 ನಾಮಪತ್ರಗಳು ಸಲ್ಲಿಕೆಯಾಗಿದ್ದವು.

RELATED ARTICLES

Latest News