ಬೆಂಗಳೂರು, ಮೇ 27-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಆರ್ಭಟಿಸಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕ್ಷೀಣಿಸಿದೆ. ಯಾದಗಿರಿ, ಕೊಪ್ಪಳ, ಇಳಕಲ್, ನಾರಾಯಣಪುರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ, ಮೇ 31ರವರೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ವಾರಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, 5 ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ವಿರಳವಾಗಿ ಮಳೆಯಾಗಬಹುದು. ಬಹುತೇಕ ಒಣಹವೆ ಮುಂದುವರೆಯಲಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಹಗುರ ಮಳೆಯಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.