ಬೆಂಗಳೂರು,ಡಿ.30- ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತಾ ಕಾರ್ಯ ಮತ್ತು ನಿರ್ವಹಣೆಯನ್ನು ಯಾವುದೇ ಸಂದರ್ಭದಲ್ಲೂ, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಂದ ಮಾಡಿಸುವುದನ್ನು ಕಡ್ಡಾಯವಾಗಿ ಸರ್ಕಾರ ನಿಷೇಧಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಸಕ್ತ ಸಾಲಿಗೆ ಬಿಡುಗಡೆಯಾಗುವ ಶಾಲಾ ನಿರ್ವಹಣಾ ಅನುದಾನವನ್ನು ಪ್ರಥಮ ಆದ್ಯತೆಯಾಗಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಲ್ಲಿಕೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು ಎಂದು ಆಯುಕ್ತರಾದ ಬಿ.ಬಿ.ಕಾವೇರಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಯಲ್ಲಿ ಬಳಸಿಕೊಂಡಲ್ಲಿ, ಅಂತವರ ವಿರುದ್ಧ ಇಲಾಖೆಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದಲ್ಲದೆ, ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ, ಕ್ರೀಡೆ, ಸಹಪಠ್ಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕು. ಶೌಚಾಲಯಗಳ ಸ್ವಚ್ಛತೆಯಿಂದ ವಿದ್ಯಾರ್ಥಿಗಳನ್ನು ದೂರ ಇರಿಸುವುದು ಅಧಿಕಾರಿಗಳು, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಇತ್ತೀಚೆಗೆ ಶೌಚಾಲಯಗಳ ಸ್ವಚ್ಛತೆಯಿಂದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡಿರುವುದು ಖಂಡನೀಯವಾಗಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಭಾರತದ ಆಟಗಾರರ ಬರುವಿಕೆಯನ್ನು ಕಾಯುತ್ತದೆಯಂತೆ ಪಾಕ್
ಎಸ್‍ಡಿಎಂಸಿ ಸಮಿತಿಯು ವಿದ್ಯಾರ್ಥಿಗಳು ಶೌಚಾಲಯದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕಾಲಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಿ ಹೆಣ್ಣು ಮಕ್ಕಳ ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದರೆ ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪ ನಿರ್ದೇಶಕರಿಗೆ ವರದಿ ಮಾಡಬೇಕು.
ಶಾಲಾ ಮೇಲುಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಚಾಚೂ ತಪ್ಪದೆ ಮಾಡಬೇಕು. ಇಂತಹ ಪ್ರಕರಣಗಳಲ್ಲಿ ಸಂಬಂಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿದೇರ್ಶಕರು ಜರೂರಾಗಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಬೇಕು. ನಿರ್ಲಕ್ಷ್ಯತನ ತೋರಿ ಇಂತಹ ಪ್ರಕರಣಗಳು ಮರುಕಳಿಸಿದರೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪ ನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿಸಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜರ್ಮನ್ ಆರೈಕೆಯಲ್ಲಿರುವ ಅರಿಹಾ ಶಾ ಜತೆ ದೀಪಾವಳಿ ಆಚರಿಸಿದ ಭಾರತೀಯ ಅಧಿಕಾರಿಗಳು
ಇದೇ ರೀತಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಇಂತಹ ಯಾವುದೇ ಪ್ರಕರಣಗಳು ಜರುಗದಂತೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಸ್ಥರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.
ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ವಹಿಸಲು ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ, ಸಂಬಂಧಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.