ಕಾರವಾರ,ಆ.16- ರಸ್ತೆಬದಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಮಾವಳ್ಳಿಕ್ರಾಸ್ ಬಳಿ ತಡರಾತ್ರಿ ನಡೆದಿದೆ.
ಮೃತರನ್ನು ಬಾಗಲಕೋಟೆ ಮೂಲದ ನೀಲವ್ವ ಹರದೊಳ್ಳಿ (40), ಜಾಲಿಹಳ್ಳ ಗ್ರಾಮದ ಗಿರಿಜವ್ವ ಬೂದನ್ನವರ(30) ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಹೆಸರು, ವಿಳಾಸ ಪತ್ತೆಯಾಗಿಲ್ಲ.
ಬಾಗಲಕೋಟೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಮಾವಳ್ಳಿ ಕ್ರಾಸ್ ಬಳಿ ರಸ್ತೆಬದಿ ಯಾವುದೇ ಸೂಚನಾಫಲಕ ಹಾಕದೆ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಕೆಲಸದ ನಿಮಿತ್ತ ಬಾಗಲಕೋಟೆಯಿಂದ ಮಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದವರು. ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.