ಹುಬ್ಬಳ್ಳಿ,ಡಿ.25-ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ತೀವ್ರ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಮೃತ ದುರ್ದೈವಿಗಳು.
ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಕಳೆದ ಮೂರು ದಿನಗಳ ಹಿಂದೆ ಸಿಲಿಂಡರ್ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸೌಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಾರಿಗಳು ಸೇರಿದ್ದು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮನೆ ಮಕ್ಕಳನ್ನ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
5 ಲಕ್ಷ ಪರಿಹಾರ ಘೋಷಿಸಿದ ಸಿಎಂ :
ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನು 58 ವರ್ಷದ ಅಜ್ಜಾಸ್ವಾಮಿ ಉರುಫ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.