ಬೆಳಗಾವಿ,ಮೇ 6– ಓವರ್ ಟೇಕ್ ಮಾಡುವ ಭರದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಅಪಘಾತದಲ್ಲಿ ದಂಪತಿ ಹಾಗೂ ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲದಿಂದ ಆಲ್ಲೊ ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ಹಿರೇಬಾಗೇವಾಡಿಗೆ ರಾತ್ರಿ ಹೋಗುತ್ತಿದ್ದಾಗ ಬೈಲಹೊಂಗಲ ಮಾರ್ಗವಾಗಿ ಬರುತ್ತಿದ್ದ ಕಿಯಾ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಆಕ್ಟೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟಣೆ ಸಂಭವಿಸಿದೆ.
ಸುದ್ದಿ ತಿಳಿದು ಬೈಲಹೊಂಗಲ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಿಯಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಶಾಸಕ ಆರ್.ವಿ ಪಾಟೀಲ್ ಅವರ ಪುತ್ರ ಸೇರಿದಂತೆ ಇಬ್ಬರಿಗೆ ಪೆಟ್ಟಾಗಿದ್ದು, ಅವರುಗಳು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.