Friday, November 22, 2024
Homeರಾಜ್ಯಮೇಲ್ಮನೆ ಚುನಾವಣೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಮೇಲ್ಮನೆ ಚುನಾವಣೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಂಗಳೂರು,ಮೇ 10- ವಿಧಾನ ಪರಿಷತ್ತಿನ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಕೀಯ ಪಕ್ಷಗಳಿಂದ ಯಾವುದೇ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ.

ಕರ್ನಾಟಕ ಈಶಾನ್ಯ ಪದವೀಧರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ತಲಾ ಒಬ್ಬರು ಪುರುಷ ಸ್ವತಂತ್ರ ಅಭ್ಯರ್ಥಿ ನಿನ್ನೆ ತಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌‍ ಈಗಾಗಲೇ ಮೇಲನೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿಲ್ಲ. ಅಲ್ಲದೆ, ಉಭಯ ಪಕ್ಷಗಳ ನಡುವೆ ಚುನಾವಣಾ ಮೈತ್ರಿ ಮುಂದುವರೆಯಲಿದೆಯೋ ಇಲ್ಲವೋ ಎಂಬುದು ಈತನಕ ಸ್ಪಷ್ಟವಾಗಿಲ್ಲ.

ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳ ಆಯ್ಕೆಗಾಗಿ ನಿನ್ನೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನಿನ್ನೆಯಿಂದಲ್ಲೇ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಶಿಕ್ಷಕರ ಕ್ಷೇತ್ರದಿಂದ ಮೂರು ಹಾಗೂ ಪದವೀಧರ ಕ್ಷೇತ್ರದಿಂದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿರುವುದರಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ.
ಅಭ್ಯರ್ಥಿಗಳು ಮೇ 16ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ.

ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

RELATED ARTICLES

Latest News