ಬೆಂಗಳೂರು, ಫೆ.15- ತುಮಕೂರು ರಸ್ತೆಯ ಗೊರಗುಂಟೆ ಪಾಳ್ಯ ಮತ್ತು ನಾಗಸಂದ್ರ ನಡುವಿನ ಮೇಲ್ಸೇತುವೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಮತ್ತು ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್‍ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಇದರ ಬಗ್ಗೆ ಕಳೆದ ಜ.20ರಂದು ನಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ದುರಸ್ತಿ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಭಾಗದ ಪ್ರಧಾನ ವ್ಯವಸ್ಥಾಪಕರು ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಐಐಎಸ್‍ಸಿ ತಜ್ಞರ ಅಭಿಪ್ರಾಯಕ್ಕಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದ್ದರು.
ಇದು ಬಂದ ಕೂಡಲೇ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದರು. ಆದರೆ, ಸರಿಸುಮಾರು ಒಂದು ತಿಂಗಳಾಗುತ್ತಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಪ್ರತಿನಿತ್ಯ ಅನುಭವಿಸುತ್ತಿರುವ ಬವಣೆಯಿಂದಾಗಿ ರೋಸಿ ಹೋಗಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ತಾವು ಕ್ರಮ ಕೈಗೊಂಡು ಕನಿಷ್ಟ ಪಕ್ಷ ದ್ವಿಚಕ್ರ ವಾಹನಗಳು ಮತ್ತು ಲಘು ವಾಹನಗಳು ಕೂಡಲೇ ಸಂಚರಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕು ಎಂದು ಸುರೇಶ್‍ಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮುಖೇನ ಒತ್ತಾಯಿಸಿದ್ದಾರೆ.
