ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ಹೊಸ ಸಮಿತಿ ರಚನೆ
ಬೆಂಗಳೂರು, ಸೆ.9- ವಾಲ್ಮೀಕಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ.7.5ರಷ್ಟು ಮೀಸಲಾತಿ ನೀಡುವ ಸಂಬಂಧ ಹೊಸ ಸಮಿತಿ ರಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ಶ್ರೀರಾಮುಲು , ಶಾಸಕರಾದ ಶಿವನಗೌಡ ನಾಯಕ್, ರಾಜುಗೌಡ ನಾಯಕ್ ಸೇರಿದಂತೆ ಮತ್ತಿತರರ ನಿಯೋಗವು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿತ್ತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಯಡಿಯೂರಪ್ಪ, ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂಬುದು ಬಹು ದಿನಗಳ ಬೇಡಿಕೆಯಾಗಿದೆ. ಹೀಗಾಗಿ ಶೀಘ್ರದಲ್ಲೇ ಹೊಸ ಸಮಿತಿಯೊಂದನ್ನು ರಚನೆ ಮಾಡಲಾಗುವುದು. ಈ ಸಮಿತಿ ನೀಡುವ ವರದಿ ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇನೆ ಎಂದು ನಿಯೋಗಕ್ಕೆ ಆಶ್ವಾಸನೆ ನೀಡಿದರು.
ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ನಮ್ಮ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂಬುದು ಐದು ದಶಕಗಳ ಬೇಡಿಕೆಯಾಗಿದೆ. ರಾಜ್ಯದಲ್ಲಿ ನಾವು ಸುಮಾರು 60ರಿಂದ 70 ಲಕ್ಷದಷ್ಟು ಜನಸಂಖ್ಯೆ ಇದ್ದೇವೆ. ಶೈಕ್ಷಣಿಕ, ಆರ್ಥಿಕವಾಗಿ ಎಲ್ಲಾ ಕ್ಷೇತ್ರದಲ್ಲೂ ಹಿಂದುಳಿದಿರುವ ನಮ್ಮ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಳೆದ ವಿಧಾನಸಭೆ ಹಾಗೂ ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಸಮುದಾಯ ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಿದ್ದೆವು. ಇದೀಗ ಮುಖ್ಯಮಂತ್ರಿಗಳಿಂದ ನಮಗೆ ಸೂಕ್ತವಾದ ಭರವಸೆ ಸಿಕ್ಕಿದೆ. ಬಹುದಿನಗಳ ಬೇಡಿಕೆ ಈಡೇರಿಸುವು ವಿಶ್ವಾಸವಿದೆ ಎಂದರು.
ಸಚಿವ ಶ್ರೀರಾಮುಲು ಮಾತನಾಡಿ, ವಾಲ್ಮೀಕಿ ಸಮುದಾಯಕ್ಕೆ ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚಿನ ಮೀಸಲಾತಿ ಕಲ್ಪಿಸಲಾಗಿದೆ. ನಮ್ಮ ರಾಜ್ಯದಲ್ಲೂ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಇದಕ್ಕೆ ಸೂಕ್ತವಾಗಿ ಸಿಎಂ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.
ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ಶೇ.50ಕ್ಕಿಂತ ಹೆಚ್ಚು ಮೀಸಲಾತಿ ನೀಡಬಾರದು ಎಂಬ ನಿರ್ದೇಶನವಿದೆ. ಆದರೆ, ಬೇರೆ ಬೇರೆ ರಾಜ್ಯಗಳಲ್ಲಿ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿತ್ತು.
ಈ ಸಮಿತಿ ನೀಡಿರುವ ವರದಿ ಹಾಗೂ ಹೊಸದಾಗಿ ಅಸ್ಥಿತ್ವಕ್ಕೆ ಬರಲಿರುವ ಸಮಿತಿ ನೀಡಲಿರುವ ವರದಿಯನ್ನು ತಾಳೆ ಹಾಕಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ. ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಶಾಸಕ ರಾಜುಗೌಡ ನಾಯಕ್ ಮಾತನಾಡಿ, ನಮ್ಮ ಸಮುದಾಯಕ್ಕೆ ಒಂದು ಉಪಮುಖ್ಯಮಂತ್ರಿ, ಮೂವರು ಸಚಿವರನ್ನು ಸಂಪುಟಕ್ಕೆ ತೆಗೆದುಕೊಳ್ಳುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಆದರೆ, ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸಿದರೆ ಮುಖ್ಯಮಂತ್ರಿ ಸ್ಥಾನ ಸಿಕ್ಕಷ್ಟೇ ಸಂತಸವಾಗುತ್ತದೆ ಎಂದು ತಿಳಿಸಿದರು.