ಬೆಂಗಳೂರು,ಸೆ.13- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಸಚಿವರೊಬ್ಬರೇ ಪ್ರಮುಖ ಆರೋಪಿಯಾಗಿರುವುದರಿಂದ ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ.
ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರಬಂಗಾರಪ್ಪ , ಶಾಸಕ ರಾದ ಬಿ.ಪಿ.ಹರೀಶ್, ಚಂದ್ರಪ್ಪ, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಬಿ.ವಿ.ನಾಯಕ್, ಮಾಜಿ ಶಾಸಕ ಸೋಮಲಿಂಗಪ್ಪ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ದೂರು ನೀಡಿದೆ.
ಪ್ರಕರಣದ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿ(ಚಾರ್ಜ್ಶೀಟ್)ಯಲ್ಲಿ ಉಲ್ಲೇಖ ಮಾಡಿದ್ದಾರೆ.
ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಈ ಎರಡೂ ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು.
ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಪ್ರಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಸಂವಿಧಾನ ಪರಿಚ್ಛೇಧ 46 ಮತ್ತು 14ರ ಪ್ರಕಾರ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮತ ಚುನಾವಣೆ ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಇ.ಡಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲೂ ಇದು ಸಾಬೀತಾಗಿರುವುದರಿಂದ ಮಾಜಿ ಸಚಿವ ಹಾಗೂ ಹಾಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ.
ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್.ಎಸ್ ಹಿರೇಹಾಳ್ ಎಂಬುವರು ಮತಗಳ ಎಣಿಕೆ ಮುಗಿಯುವ ಮೊದಲೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲವನ್ನು ಪರಿಗಣಿಸಿ ನಾಗೇಂದ್ರ ಸದಸ್ಯತ್ವ ಅನರ್ಹಗೊಳಿಸುವುದು ಮತ್ತು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದು ಮಾಡುವಂತೆ ಮನವಿ ಮಾಡಲಾಗಿದೆ.
ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಾಲೀಕಿ ನಿಗಮದ ಹಗರಣದ ಹಣವನ್ನು ಚುನಾವಣೆಗೆ ಬಳಸಿದ್ದು, ಗ್ಯಾರಂಟಿಗಳಿಗೆ 16 ಸಾವಿರ ಕೋಟಿ ಹಣ ದುರುಪಯೋಗವಾಗಿದೆ ಎಂದು ದೂರು ಕೊಟ್ಟಿದ್ದೇವೆ ಎಂದು ಹೇಳಿದರು.
ಪರಾಜಿತ ಅಭ್ಯರ್ಥಿ ಅರುಣ್ ಹಿರೇಹಾಳ್ ಅವರು ಮತ ಎಣಿಕೆ ನಡೆಯುವ ಮುನ್ನವೇ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅದಕ್ಕೆ ಚುನಾವಣಾ ಆಯೋಗ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ ಎಂದರು.
ಈಗಾಗಲೇ ಇ.ಡಿ ಕ್ರಮ ಕೈಗೊಂಡಿದೆ. ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ದದ್ದಲ್ ವಜಾ ಗೊಳಿಸಬೇಕು. ರಾಜ್ಯಪಾಲರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನ್ಯಾಯಾಲಯದಲ್ಲೂ ಇದನ್ನು ಪ್ರಶ್ನಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದರು.