ಬೆಂಗಳೂರು, ಜ.22- ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗಳಾದ ಮೇಕೆದಾಟು, ಮಹದಾಯಿ ಯೋಜನೆಗಳನ್ನು ಶೀಘ್ರ ಜಾರಿಗೊಳಿಸಬೇಕು. ನಾಡದ್ರೋಹಿ ಎಂಇಎಸ್ ಸಂಘಟನೆಯನ್ನು ನಿಷೇಸಬೇಕೆಂದು ಒತ್ತಾಯಿಸಿ ಕನ್ನಡ ಒಕ್ಕೂಟದ ಮುಖಂಡರಾದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ನಗರದ ಪುರಭವನದ ಎದುರು ಇಂದು ಪ್ರತಿಭಟನೆ ನಡೆಸಲಾಯಿತು.
ಒಕ್ಕೂಟದ ಮುಖಂಡರಾದ ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕನ್ನಡಪರ ಹೋರಾಟಗಾರ ಗಿರೀಶ್ಗೌಡ, ವಿವಿಧ ಸಂಘಟನೆಗಳ ಮುಖಂಡರು ಇಂದು ಪ್ರತಿಭಟನೆ ನಡೆಸಿ ಮೇಕೆದಾಟು ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು ಮೇಕೆದಾಟು ಯೋಜನೆ ಜಾರಿಗಾಗಿ ಒತ್ತಾಯಿಸಿ ಕನ್ನಡ ಒಕ್ಕೂಟ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದೆ. ರಾಜ್ಯಕ್ಕೆ ಹಾಗೂ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗೆ ಅಗತ್ಯವಾದ ಈ ಯೋಜನೆಗೆ ಸುಪ್ರೀಂಕೋರ್ಟ್ನ ಯಾವುದೇ ಆಕ್ಷೇಪವಿಲ್ಲ. ಸರ್ಕಾರ ತಡಮಾಡದೆ ಈ ಯೋಜನೆಯನ್ನು ಜಾರಿಗೊಳಿಸಬೇಕು. ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥವನ್ನು ಬದಿಗಿಟ್ಟು ಪಕ್ಷಾತೀತವಾಗಿ ಈ ಕೆಲಸಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಮಹದಾಯಿ ಕೂಡ ಉತ್ತರ ಕರ್ನಾಟಕ ಭಾಗದ ಗಂಭೀರವಾದ ಸಮಸ್ಯೆಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಿ ಉತ್ತರ ಕರ್ನಾಟಕ ಭಾಗದ ಜನರ ಕುಡಿಯುವ ನೀರಿನ ಬವಣೆ ನೀಗಿಸಬೇಕು ಎಂದು ಆಗ್ರಹಿಸಿದರು.ನಮ್ಮ ಸಂಸದರು ಪ್ರಧಾನಿಯವರ ಮೇಲೆ ಒತ್ತಡ ತಂದು ಈ ಯೋಜನೆ ಜಾರಿಗೆ ತರಬೇಕು ಎಂದು ಹೇಳಿದರು.
ಸಾ.ರಾ.ಗೋವಿಂದು ಮಾತನಾಡಿ, ಮೇಕೆದಾಟು, ಮಹದಾಯಿಗಾಗಿ ಹೋರಾಟ ನಡೆಸಿದವರು ಕನ್ನಡಪರ ಹೋರಾಟಗಾರರು. ಅದನ್ನು ನಾವು ಮುಂದುವರೆಸಲಿದ್ದೇವೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿ ಸರ್ಕಾರದ ವಾಹನಗಳಿಗೆ ಬೆಂಕಿಯಿಟ್ಟು ನಾಡಧ್ವಜವನ್ನು ಸುಟ್ಟುಹಾಕಿ ನಾಡದ್ರೋಹವೆಸಗಿರುವ ಎಂಇಎಸ್ ಸಂಘಟನೆಯನ್ನು ನಿಷೇಸಬೇಕು. ಅವರ ಪುಂಡಾಟ ನಿಲ್ಲಿಸಬೇಕು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟ ರಾಜ್ಯಾದ್ಯಂತ ಹೋರಾಟಕ್ಕೆ ಕರೆಕೊಟ್ಟಿತ್ತು. ಕೊರೊನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಬೇಡಿಕೆಗಳು ಈಡೇರದಿದ್ದರೆ
ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
