ಬೆಂಗಳೂರು,ಸೆ.17- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಮಂಜೂರಾತಿ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇದ್ದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಅನುಮೋದನೆ ನೀಡಿ, ಬೋಧಕ ಮತ್ತು ಬೋಧಕೇತೇರ ಸಿಬ್ಬಂದಿಗಳ ಹುದ್ದೆಗಳನ್ನು ಮಂಜೂರು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : 7 ದಶಕಗಳ ನಂತರ ಭಾರತಕ್ಕೆ ಬಂದ 8 ಚೀತಾಗಳು
ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 371 ಜೆ ಮೀಸಲಾತಿ ಅಡಿಯಲ್ಲಿ 104 ಬೋಧಕ ಮತ್ತು 122 ಬೋಧಕೇತರ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ. ಬೆಳಗಾವಿ ಜಿಲ್ಲೆಯ ಅಥಣಿ ವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭಕ್ಕಾಗಿ 77 ಬೋಧಕರು ಹಾಗೂ 98 ಬೋಧಕೇತರ ಹುದ್ದೆಗಳು ಮಂಜೂರಾಗಿದ್ದು, ಶೀಘ್ರದಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆ ಸಚಿವರು ವಿವರಿಸಿದ್ದಾರೆ.
ಕರ್ನಾಟಕ ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಖಾಲಿ ಇದ್ದ 36 ಬ್ಯಾಗ್ ಲಾಕ್ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ
ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿ ಮಾಡಲ್ಲ : ಆರಗ ಜ್ಞಾನೇಂದ್ರ ಸ್ಪಷ್ಟನೆ
ಅಥಣಿ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಸಂಬಂಸಿದಂತೆ ಈ ಹಿಂದೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಬಾಕಿ ಇದ್ದ ನಿರ್ಮಾಣ ಕಾಮಗಾರಿ ಕುರಿತು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಕಾರಿಗಳು-ಸಿಬ್ಬಂದಿಗಳಿಗೆ ತಾಕೀತು ಮಾಡಿ, ಅಥಣಿಗೆ ಭೇಟಿ ನೀಡಿ, ಕಾಲೇಜು ಕಟ್ಟಡಗಳ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಕಟ್ಟಡಗಳ ಗುಣಮಟ್ಟ ಕಾಯ್ದುಕೊಂಡು, ಮೂಲಭೂತ ಸೌಲಭ್ಯಗಳನ್ನು ಒದಗಿಸಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು ಎಂದು ತಿಳಿಸಿರುವ ಪ್ರಭು ಚವ್ಹಾಣ್ ಅವರು ತಾವು ಕಾಲೇಜು ನಿರ್ಮಾಣಕ್ಕೆ ವಹಿಸಿದ್ದ ಮುತುವರ್ಜಿಯನ್ನು ವಿವರಿಸಿದ್ದಾರೆ.
ಅಥಣಿಯಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಾರಂಭವಾದರೆ ಮುಂಬೈ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಈ ಭಾಗದ ನಿರುದ್ಯೋಗಿ ಯುವಕರಿಗೆ ಮತ್ತು ಮಹಿಳೆಯರಿಗೆ ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ಉದ್ಯೋಗಾವಕಾಶ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದು ಸಚಿವರು ಬಣ್ಣಿಸಿದ್ದಾರೆ.