ಬೆಂಗಳೂರು, ಜೂ.3- ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಹಣಾಹಣಿಗೆ ವೇದಿಕೆ ಸಿದ್ಧಗೊಂಡಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದರಿಂದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ಉಮೇದುವಾರಿಕೆ ಮಾಡಿದರೆ ಬಿಜೆಪಿ-ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ಒಂದು ವೇಳೆ ಯಾವುದೇ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡದಿದ್ದರೆ ಕಣದಲ್ಲಿರುವ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಗತ್ಯಬಿದ್ದರೆ ಜೂ.13ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೂ ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.
ಪಕ್ಷೇತರ ಅಭ್ಯರ್ಥಿಗಳ ನಾಮಪತ್ರಕ್ಕೆ ಸೂಚಕರಾಗಿ 10 ಶಾಸಕರು ಸಹಿ ಹಾಕಬೇಕು. ಒಂದು ವೇಳೆ ಯಾರ ಸಹಿಯೂ ಇಲ್ಲದಿದ್ದರೆ ನಾಮಪತ್ರ ತಿರಸ್ಕೃತವಾಗಲಿದೆ.
ನಾಮಪತ್ರ ಸಲ್ಲಿಕೆ:
ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನದವರೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೊದಲು ಕಾಂಗ್ರೆಸ್‌ನ 7 ಅಭ್ಯರ್ಥಿಗಳಾದ ಎನ್.ಎಸ್. ಬೋಸರಾಜು, ವಸಂತ್‌ಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಅವರುಗಳು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಮಾಡಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು. ಇನ್ನು ಬಿಜೆಪಿಯಿಂದ ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಎಂ.ಜಿ.ಮುಳೆ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಶಾಸಕರು, ಮುಖಂಡರು ಅಭ್ಯರ್ಥಿಗಳಿಗೆ ಸಾಥ್ ನೀಡಿದರು. ಜೆಡಿಎಸ್‌ನಿಂದ ಹಿರಿಯ ಮುಖಂಡ ಜವರಾಯಗೌಡ ಅವರು ಉಮೇದುವಾರಿಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.
ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಕಾಂಗ್ರೆಸ್ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 19 ಮತಗಳನ್ನು ಪಡೆಯಬೇಕು.
ವಿಧಾನಪರಿಷತ್ ಸದಸ್ಯರಾದ ಅರವಿಂದ್‌ಕುಮಾರ್ ಅರಳಿ, ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜ್, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡಪಿ.ಎಂ, ಕೆ.ಪಿ.ನಂಜುಂಡಿ ವಿಶ್ವಕರ್ಮ ಬಿ.ಎಂ.ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿ ಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್‌ಕುಮಾರ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಎನ್.ಎಸ್.ಬೋಸರಾಜ್, ಗೋವಿಂದರಾಜ್, ಎನ್.ರವಿಕುಮಾರ್ ಪುನಃ ಸ್ಪರ್ಧಿಸಿದ್ದಾರೆ.