Friday, June 28, 2024
Homeರಾಜಕೀಯ3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳ ಚುನಾವಣೆ : ಐದು ಕ್ಷೇತ್ರಗಳ ಫಲಿತಾಂಶ ಪ್ರಕಟ

3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳ ಚುನಾವಣೆ : ಐದು ಕ್ಷೇತ್ರಗಳ ಫಲಿತಾಂಶ ಪ್ರಕಟ

ಬೆಂಗಳೂರು,ಜೂ.6- ರಾಜ್ಯದ ವಿಧಾನಪರಿಷತ್‌ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಐದು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್‌‍, ಜೆಡಿಎಸ್‌‍ ತಲಾ ಎರಡು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿವೆ. ಬೆಂಗಳೂರು ಪದವೀಧರ ಕ್ಷೇತ್ರದ ಮತ ಎಣಿಕೆ ತಡರಾತ್ರಿವರೆಗೂ ನಡೆದಿದ್ದು, ಕಾಂಗ್ರೆಸ್‌‍ ಅಭ್ಯರ್ಥಿ ರಾಮೋಜಿಗೌಡ 36729 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಅವರು 34888 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 11841 ಮತಗಳ ಅಂತರದಿಂದ ರಾಮೋಜಿಗೌಡ ಚುನಾಯಿತರಾಗಿದ್ದಾರೆ. ಚಲಾವಣೆಯಾಗಿದ್ದ 80080 ಮತಗಳಲ್ಲಿ 8482 ಮತಗಳು ತಿರಸ್ಕೃತಗೊಂಡಿದ್ದವು. 71598 ಮತಗಳು ಸಿಂಧುವಾಗಿದ್ದವು.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌‍ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರಾಭವಗೊಂಡಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಕೆ.ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯಗಳಿಸಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಸೋಲುಂಟಾಗಿದೆ.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌.ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿ ಎರಡನೇ ಬಾರಿಗೆ ಮೇಲನೆ ಪ್ರವೇಶಿಸಿದ್ದಾರೆ.ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ವಿಜೇತರಾಗಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಆಯನೂರು ಮಂಜುನಾಥ್‌ ಪರಾಭವಗೊಂಡಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿಭಟ್‌ಗೆ ಮೂರನೇ ಸ್ಥಾನ ದೊರೆತಿದೆ.

ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಡಾ.ಚಂದ್ರಶೇಖರ್‌ ಬಸವರಾಜ್‌ ಪಾಟೀಲ್‌ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಮರ್‌ನಾಥ್‌ ಪಾಟೀಲ್‌ ಹಿನ್ನಡೆಯಲ್ಲಿದ್ದಾರೆ. ಗೆಲುವಿನ ಕೋಟಾ ಮೊದಲ ಪ್ರಾಶಸ್ತ್ಯದ ಮತ ಲಭಿಸದ ಹಿನ್ನೆಲೆಯಲ್ಲಿ ಎರಡನೆ ಪ್ರಾಶಸ್ತ್ಯದ ಮತ ಎಣಿಕೆ ನಡೆಯುತ್ತಿದ್ದು, ಅಧಿಕೃತ ಫಲಿತಾಂಶ ಪ್ರಕಟವಾಗಬೇಕಿದೆ.

ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಜೆಡಿಎಸ್‌‍ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಎರಡು ಕ್ಷೇತ್ರ ಸೋತಿದ್ದು, ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌‍ ಆರು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಮೂರು ಕ್ಷೇತ್ರಗಳಲ್ಲಿ ಸೋತು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ.

RELATED ARTICLES

Latest News