ಬೆಂಗಳೂರು,ಜೂ.6- ರಾಜ್ಯದ ವಿಧಾನಪರಿಷತ್‌ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳಿವೆ.ಜೂನ್ 3 ರಂದು ಈ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮತಪತ್ರ ಬಳಕೆ ಮಾಡಿದ್ದು, ಪ್ರಾಶಸ್ತ್ಯದ ಮತಗಳನ್ನು ಎಣಿಕೆ ಮಾಡಬೇಕಾಗಿರುವುದರಿಂದ ಫಲಿತಾಂಶ ವಿಳಂಬವಾಗಲಿದೆ.
ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಆರು, ಬಿಜೆಪಿಯ ನಾಲ್ಕು, ಜೆಡಿಎಸ್‌ನ ಇಬ್ಬರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.ಇಂದು ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಮಹಾರಾಣಿ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳ ಬೆಂಗಳೂರು ಸರ್ಕಾರಿ ಕಲಾ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಬೆಂಗಳೂರು ಪದವೀಧರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಆರಂಭಗೊಂಡಿದೆ.
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ, ಪಕ್ಷೇತರ ಅಭ್ಯರ್ಥಿಗಳಾದ ಎಂ.ಪುಟ್ಟಸ್ವಾಮಿ, ನೀಲಕಂಠ ಆರ್.ಗೌಡ ಸೇರಿದಂತೆ 15 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಬಿ.ಟಿ.ಶ್ರೀನಿವಾಸ ಸೇರಿದಂತೆ 15 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೇಗೌಡ, ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಸೇರಿದಂತೆ ಒಟ್ಟು 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ, ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ, ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಸೇರಿದಂತೆ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಪಕ್ಷೇತರ ಅಭ್ಯರ್ಥಿ ರಘುಪತಿಭಟ್ ಸೇರಿದಂತೆ 10 ಮಂದಿ ಸ್ಪರ್ಧಿಸಿದ್ದರು.ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ್ ಬಸವರಾಜ್ ಪಾಟೀಲ್, ಬಿಜೆಪಿ ಅಭ್ಯರ್ಥಿ ಅಮರ್‌ನಾಥ್ ಪಾಟೀಲ್ ಸೇರಿದಂತೆ 19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಪ್ರತಿ ಕ್ಷೇತ್ರಕ್ಕೂ 14 ಟೇಬಲ್‌ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್‌ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ನಿಯೋಜನೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.