ಬೆಳಗಾವಿ,ನ.4- ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಅನೇಕ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಈವರೆಗೂ ಪರಿಹಾರವನ್ನೇ ನೀಡಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀಕರ ಮಳೆಯಿಂದ ತೊಂದರೆಗೀಡಾದ ರೈತರು ಪರಿಹಾರ ಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಇಲಾಖೆಯ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ; ಕಂದಾಯ, ಕೃಷಿ ಸಚಿವರು ಉತ್ತರ ಕರ್ನಾಟಕದ ಪ್ರವಾಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆ ಸೇರಿ ಈ ಭಾಗದ ಕಬ್ಬು ಬೆಳೆಗಾರರು ಹೋರಾಟ, ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ ಸರಕಾರ ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಬೇಕಿದೆ ಎಂದು ಒತ್ತಾಯಿಸಿದರು.
6 ಮಿಲಿಯನ್ ಟನ್ ಕಬ್ಬು ಅರೆಯುತ್ತಿದ್ದು, ಮೊಲಾಸೆಸ್, ಎಥೆನಾಲ್ ಮೊದಲಾದವುಗಳಿಂದ ರಾಜ್ಯ ಸರಕಾರಕ್ಕೆ ತೆರಿಗೆ ಮೂಲಕ ಸುಮಾರು 50-55 ಸಾವಿರ ಕೋಟಿ ಆದಾಯ ಬರುತ್ತದೆ. ಆದಾಗ್ಯೂ ಈ ಸರಕಾರ ಸಂಕಷ್ಟದಲ್ಲಿರುವ ರೈತರ ಸಮಸ್ಯೆ ಆಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರವು ತನ್ನ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕು. ನಾಡಿಗೆ ಅನ್ನ ನೀಡುವ ರೈತರ ವಿಚಾರ ಬಂದಾಗ ಪಕ್ಷಾತೀತವಾಗಿ ನಾವು ರೈತರ ಪರವಾಗಿ ನಿಲ್ಲಬೇಕಾಗುತ್ತದೆ. ನಮ ಪಕ್ಷದ ಮುಖಂಡರ ಜೊತೆ ಚರ್ಚಿಸಿ ಅವರ ಪ್ರತಿಭಟನೆಗೆ ಬೆಂಬಲ ನೀಡಲು ಬಂದಿದ್ದೇನೆ ಎಂದು ತಿಳಿಸಿದರು.
2014ರಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ರೈತ ವಿಠಲ ಅರಬಾವಿ ಅವರು ಕಬ್ಬಿನ ದರದ ವಿಚಾರದಲ್ಲಿ ಪ್ರಾಣ ಕಳಕೊಂಡರು. ಯಡಿಯೂರಪ್ಪ ಅವರೂ ಬೀದಿಗಿಳಿದು ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿಗಳಿಗೆ 150 ರೂ. ಹೆಚ್ಚುವರಿ ದರಕ್ಕೆ ಒತ್ತಾಯ ಮಾಡಿದ್ದರು. ಆಗ ಹೋರಾಟ ಯಶಸ್ವಿಯಾಗಿತ್ತು ಎಂದು ನೆನಪಿಸಿದರು.
ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಕಳೆದ ಕೆಲವು ದಿನಗಳಿಂದ ಯುದ್ಧ ಪ್ರಾರಂಭವಾಗಿದೆ. ಅದು ಯಾವ ಮಟ್ಟಕ್ಕೆ ಹೋಗಲಿದೆ ಎಂಬುದು ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಗೊತ್ತಾಗುತ್ತದೆ ಎಂದು ಹೇಳಿದರು.
ನಾಡಿನ ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿ ಸಂದರ್ಭದಲ್ಲಿ ನಾನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಗುಲ್ಬರ್ಗ, ಯಾದಗಿರಿ, ರಾಯಚೂರು ಭಾಗದಲ್ಲಿ ನಮ ವಿಪಕ್ಷ ನಾಯಕರೂ ಪ್ರವಾಸ ಮಾಡಿದ್ದಾರೆ ಎಂದು ತಿಳಿಸಿದರು.
