ಬೆಂಗಳೂರು,ಜ.10- ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಭಾರೀ ಪ್ರಮಾಣದಲ್ಲಿ ಜನರು ಸೇರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಅವರು, ಇದಕ್ಕೆ ಏನಾದರೊಂದು ಪರಿಹಾರ ಕಂಡುಕೊಳ್ಳಬೇಕೆಂದು ಸಲಹೆ ಮಾಡಿದ್ದಾರೆ.
ನಿನ್ನೆ ನಡೆದ ಮೊದಲ ದಿನದ ಪಾದಯಾತ್ರೆಯಲ್ಲಿ ಸರಿಸುಮಾರು 5ರಿಂದ 6 ಸಾವಿರ ಜನರು ಸೇರಿದ್ದರು. ಅಲ್ಲಿ ಯಾರೊಬ್ಬರೂ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಲಿಲ್ಲ. ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಯಾವುದೂ ಕಾಣುತ್ತಿಲ್ಲ. ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬುದನ್ನು ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ.
ಪಾದಯಾತ್ರೆ ಇನ್ನು 9 ದಿನ ನಡೆಯುವುದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆಯಿದೆ. ಇದರಿಂದ ಕೊರೊನಾ ಸೂಪರ್ ಸ್ಪ್ರೆಡ್ ಆಗಿ ಹರಡುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ 10 ಸಾವಿರ ಸಮೀಪ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಭಾನುವಾರ ಒಂದೇ ದಿನ 12 ಸಾವಿರ ದಾಟಿದೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.6.8ರಷ್ಟಿದ್ದರೆ, ಬೆಂಗಳೂರಿನಲ್ಲಿ ಈಗಾಗಲೇ ಶೇ.10ರಷ್ಟು ದಾಟಿದೆ. ಮುಂದೆ ಪ್ರತಿದಿನ 25ರಿಂದ 40 ಸಾವಿರ ಪ್ರಕರಣಗಳು ಬರಬಹುದು. ಹೀಗಾಗಿ ಸರ್ಕಾರ ಯಾವುದಾದರೊಂದು ಕ್ರಮವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಇದೆ ಎಂದು ಮನವರಿಕೆ ಮಾಡಿದ್ದಾರೆ.
ಪಾದಯಾತ್ರೆಗೆ ಬರುವವರು ಮಾರ್ಗಸೂಚಿಗಳನ್ನೆ ಪಾಲಿಸುವುದಿಲ್ಲ. ಅಲ್ಲಿ ಆರ್‍ಟಿಪಿಸಿಆರ್ ಟೆಸ್ಟಿಗೂ ಒಪ್ಪುವುದಿಲ್ಲ. ನಾಯಕರೆನಿಸಿಕೊಂಡವರೇ ಕೋವಿಡ್ ಟೆಸ್ಟ್‍ಗೆ ಬರುವುದಿಲ್ಲ ಎಂದರೆ ಸಾರ್ವಜನಿಕರನ್ನು ಒತ್ತಾಯಿಸುವುದಾದರೂ ಹೇಗೆ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
ಪಾದಯಾತ್ರೆಯನ್ನು ಮುಂದುವರೆಸುವುದಾದರೆ ಸರ್ಕಾರ ಸಂಘಟಿಗರಿಗೆ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿಸಬೇಕು. ಎರಡು ಡೋಸ್ ಲಸಿಕೆ ಪಡೆಯದವರನ್ನು ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಂತೆ ನಿರ್ಬಂಧ ಹಾಕುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ದಿನದಿಂದ ದಿನಕ್ಕೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಕೊರೊನಾ ಮಿತಿಮೀರಿ ಹೋಗಬಹುದು. ಸರ್ಕಾರ ತತ್‍ಕ್ಷಣವೇ ಏನಾದರೊಂದು ಪರಿಹಾರವನ್ನು ಕಂಡುಕೊಳ್ಳಬೇಕು. ತಡಮಾಡಿದಷ್ಟೂ ಆಪತ್ತು ಎದುರಾಗುತ್ತದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಅಧಿಕಾರಿಗಳ ಆತಂಕವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇಂದು ಸಂಜೆಯೊಳಗೆ ಬಿಗಿಯಾದ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ 30 ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.
