ಬೆಂಗಳೂರು, ಮೇ 15-ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದೆ. ವಿವೇಕಾನಂದ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ವಿವೇಕಾನಂದ ಅವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿ ಫಾರಂ ನೀಡಿದ್ದಾರೆ.
ಪದನಾಭನಗರದ ಗೌಡರ ನಿವಾಸದಲ್ಲಿ ಬಿ ಫಾರಂ ನೀಡುವ ಸಂದರ್ಭದಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮುಖಂಡರಾದ ನಿರಂಜನ್ ಮೂರ್ತಿ, ನಾಗಣ್ಣಗೌಡರು ಉಪಸ್ಥಿತರಿದ್ದರು.
ಮರಿತಿಬ್ಬೇಗೌಡ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ಬಳಿಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದರು.
ಲೋಕಸಭೆ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಮೇಲನೆ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಈ ನಡುವೆ ಬಿಜೆಪಿ ನೈರುತ್ಯ ಶಿಕ್ಷಕರ ಕ್ಷೇತ್ರ ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು.
ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಇ.ಸಿ.ನಿಂಗರಾಜು ಅವರಿಗೆ ಟಿಕೆಟ್ ಘೋಷಣೆಯಾಗಿತ್ತು. ಬಳಿಕ ಜೆಡಿಎಸ್ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ನಿಂಗರಾಜು ಕೂಡ ಸ್ಪರ್ಧಿಸಲು ಅಣಿಯಾಗಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.