ಬೆಂಗಳೂರು, ಅ.12- ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಮಠಾಧೀಶರ ಮಹತ್ವದ ಸಭೆ ನಾಳೆ ನಡೆಯಲಿದೆ.
ಈ ಸಮೀಕ್ಷೆ ಆರಂಭಕ್ಕೂ ಮುನ್ನ ಆದಿಚುಂಚನಗಿರಿ ಮಠದ ವಿಜಯನಗರ ಶಾಖಾಮಠದ ಸಮುದಾಯ ಭವನದಲ್ಲಿ ಇದೇ ರೀತಿ ಸಭೆ ನಡೆಸಿ ಒಕ್ಕಲಿಗರ ಒಗ್ಗಟ್ಟು ಪ್ರದರ್ಶಿಸಲಾಗಿತ್ತು. ಸಮೀಕ್ಷೆ ಕುರಿತಂತೆ ಸಮುದಾಯದವರಲ್ಲಿ ಜಾಗೃತಿ ಮೂಡಿಸಿ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಲು ಕರೆ ನೀಡಲಾಗಿತ್ತು.
ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ರಾಜ್ಯದ ವಿವಿಧೆಡೆ ಸಮೀಕ್ಷೆ ಬಹುತೇಕ ಮುಕ್ತಾಯ ಹಂತ ತಲುಪಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಸಮೀಕ್ಷೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಾಳೆ ಜಾಗೃತಿ ಸಭೆ ನಡೆಸಲಾಗುತ್ತದೆ.
ಈ ಸಭೆಗೆ ಒಕ್ಕಲಿಗ ಸಮುದಾಯದ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರುಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಇದುವರೆಗೆ ಸಮೀಕ್ಷೆಯಲ್ಲಿ ಕಂಡುಬಂದ ಲೋಪದೋಷಗಳು, ಸಮುದಾಯದವರಿಗೆ ಮಾಡಿರುವ ಜಾಗೃತಿ, ಆಗಿರುವ ಪ್ರಗತಿ, ಜಿಬಿಎ ವ್ಯಾಪ್ತಿಯಲ್ಲಿ ಒಕ್ಕಲಿಗ ಜನಾಂಗದವರು ಎಲ್ಲರೂ ಪಾಲ್ಗೊಳ್ಳುವಂತೆ ಅರಿವು ಮೂಡಿಸುವ ಬಗ್ಗೆ ಸುದೀರ್ಘ ಸಮಾಲೋಚನೆ ಮಾಡಲಾಗುತ್ತದೆ.
ಈಗಾಗಲೇ ಸಮೀಕ್ಷೆಯನ್ನು ಮುಂದೂಡುವಂತೆ ಹಾಗೂ ವಿಸ್ತರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅಲ್ಲದೆ, ಸಮೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮೊರೆ ಹೋಗಿದ್ದು, ಮಧ್ಯಂತರ ಆದೇಶವನ್ನು ನ್ಯಾಯಾಲಯ ನೀಡಿದೆ.
ಸಭೆಯಲ್ಲಿ ಸಂಘ-ಸಂಸ್ಥೆಗಳು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಸಮೀಕ್ಷೆ ಕುರಿತಂತೆ ಸಲಹೆ-ಸೂಚನೆಗಳನ್ನು ಆಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾಳೆ ನಡೆಯುವ ಒಕ್ಕಲಿಗ ನಾಯಕರು, ಮುಖಂಡರ ಸಭೆ ಕುತೂಹಲ ಕೆರಳಿಸಿದ್ದು, ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.