ಬೆಂಗಳೂರು,ಏ.27- ದೇಶದ ಐಕ್ಯತೆ ಹಾಗೂ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಕಾಂಗ್ರೆಸ್ ಪಕ್ಷ ಈ ವಿಚಾರದಲ್ಲಿ ತೀರ್ಮಾನ ಮಾಡಿದೆ. ಪಕ್ಷದ ಕಾರ್ಯಕಾರಿ ಸಮಿತಿ ನಿರ್ಣಯ ಕೈಗೊಂಡಿದ್ದು ಅದಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.
ದೇಶದ ಐಕ್ಯತೆ, ಶಾಂತಿ, ಸಮಗ್ರತೆ ಮುಖ್ಯ. ಪ್ರತಿಯೊಬ್ಬರ ಪ್ರಾಣವೂ ಮುಖ್ಯ. ನಾವೆಲ್ಲರೂ ಭಾರತೀಯರು ಎಂದ ಅವರು, ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಬೇಕಿತ್ತು ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. ಇದಕ್ಕೆ ಅವರೇ ಉತ್ತರ ಕೊಡಬೇಕು. ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ನೀಡಿರುವ ಹೇಳಿಕೆಗೆ ನಾವೆಲ್ಲರೂ ಬದ್ದರಾಗಿರುತ್ತೇವೆ ಎಂದರು. ಪಾಕಿಸ್ತಾನದೊಂದಿಗೆ ಯುದ್ಧ ಅಗತ್ಯವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಶಿವಕುಮಾರ್, ಮುಖ್ಯಮಂತ್ರಿಯಿಂದಲೇ ಸ್ಪಷ್ಟನೆ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದರು.
ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮುಂದುವರೆಸಲಿದೆ. ಏ.29 ರಂದು ಬೆಳಗಾವಿಯಲ್ಲಿ ಬೆಲೆ ಏರಿಕೆ ಹಾಗೂ ಸಂವಿಧಾನದ್ದ ಕುರಿತು ಪ್ರತಿಭಟನೆಯನ್ನು ನಡೆಸಲಿದ್ದೇವೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಕಸ್ತೂರಿ ರಂಗನ್ ಅವರ ಹೆಸರು ಶಾಶ್ವತವಾಗಿ ಉಳಿಯಬೇಕಾಗಿದೆ. ಅವರ ಸೇವೆ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗುತ್ತಿದೆ ಎಂದರು. ನಮ್ಮ ದೇಶಕ್ಕೆ, ವಿಜ್ಞಾನಕ್ಕೆ ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಇಸ್ರೋಗೂ ಅವರು ಉತ್ತಮ ಕೊಡುಗೆ ನೀಡಿದ್ದಾರೆ.
ರಾಜ್ಯಸಭೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಸೇವೆಗೆ ಹಲವು ಪ್ರಶಸ್ತಿಗಳು ದೊರೆತಿವೆ. ಅವರು ನಮ್ಮನ್ನು ಅಗಲಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಇಸ್ರೋದ ಮಾಜಿ ಅಧ್ಯಕ್ಷರಾದ ಯು.ಆರ್.ರಾವ್ ಅವರ ಆರೋಗ್ಯವೂ ಸರಿಯಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.