ಬೆಂಗಳೂರು,ಮಾ.11- ರಾಜ್ಯ ಸರ್ಕಾರ ಇರುವವರೆಗೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಿಣಿಯರಿಗೆ 2 ಸಾವಿರ ರೂ. ಗೃಹಲಕ್ಷ್ಮಿ, ಯುವಕರಿಗೆ ಯುವನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 52 ಸಾವಿರ ಕೋಟಿ ರೂ. ವಾರ್ಷಿಕ ವೆಚ್ಚವಾಗುತ್ತಿದೆ. ಅದು ಫಲಾನುಭವಿಗಳಿಗೆ ತಲುಪುತ್ತಿದೆಯೇ, ಇಲ್ಲವೇ ಎಂದು ಪರಿಶೀಲಿಸಲು ಕಾರ್ಯಕರ್ತರನ್ನು ಕಳುಹಿಸಿದರೆ ತಪ್ಪೇನು? ಎಂದು ಸಮರ್ಥಿಸಿಕೊಂಡರು.
ನಮಗೆ ನಾಡಿನ ಜನರು 138 + 2 ಶಾಸಕರ ಸ್ಥಾನವನ್ನು ಕೊಟ್ಟು ಅಧಿಕಾರ ನೀಡಿದ್ದಾರೆ. ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಯಾಗಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಅಲ್ಲಿಯವರೆಗೂ ಕಾರ್ಯಕರ್ತರು ಸಮಿತಿಯಲ್ಲಿ ಮುಂದುವರೆಯುತ್ತಾರೆ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಪ್ರಧಾನಿಯವರು ಗ್ಯಾರಂಟಿ ಅನುಷ್ಠಾನ ಸಾಧ್ಯವಿಲ್ಲ ಎಂದು ಹೇಳಿದರು. 5 ಗ್ಯಾರಂಟಿ ಅನುಷ್ಠಾನ ಮಾಡಿದರೆ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸುವುದನ್ನು ಮನಗಂಡು ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದೆವು. ಇದನ್ನು ಬಿಜೆಪಿ ಅಧಿಕಾರದಲ್ಲಿರುವ ಮಹಾರಾಷ್ಟ್ರ, ದೆಹಲಿಯಲ್ಲೂ ಪ್ರಾರಂಭಿಸಿದ್ದಾರೆ ಎಂದು ಹೇಳಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸಮರ್ಥಿಸಿಕೊಂಡರು.