ಬೆಂಗಳೂರು,ಮಾ.7-ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಭರವಸೆ ನೀಡಿದರು.2025-26ನೇ ಸಾಲಿನ ಆಯವ್ಯಯ ಮಂಡಿಸಿದ ಅವರು, ಈ ಯೋಜನೆಯಡಿ, ನೀರನ್ನು ಮೇಲೆತ್ತಿ ಗುರುತ್ವಾ ಕಾಲುವೆಯ ಸರಪಳಿ 32.5 ಕಿ.ಮೀ ವರೆಗೆ ಹರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಲ್ಲಾ ಎಂಟು ವಿಯರ್‌ಗಳಲ್ಲಿ ಲಭ್ಯವಾಗುವ ನೀರನ್ನು ಗುರುತ್ವಾ ಕಾಲುವೆಯ ಸರಪಳಿ 241 ಕಿ.ಮೀ ವರೆಗೆ ಹರಿಸಲಾಗುವುದು ಎಂದರು.
ನೀರಾವರಿ ಯೋಜನೆಗಳಡಿ ನೀರಿನ ಬಳಕೆಯಲ್ಲಿ ದಕ್ಷತೆ ಹೆಚ್ಚಿಸಲು ಹಾಗೂ ನೀರು ನಿರ್ವಹಣೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ.ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಬಿಡುಗಡೆಯಾಗದಿದ್ದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ ಎಂದು ಅವರು ಹೇಳಿದರು.
ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ :
49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಒಂದೇ ಹಂತದಲ್ಲಿ ರೈತರಿಗೆ ಪರಿಹಾರ :
ಕೃಷ್ಣ ಮೇಲ್ದಂಡೆ ಯೋಜನೆ ಹಂತ-3ರ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟನ್ನು 524.256 ಮೀಟರ್‌ವರೆಗೆ ಎತ್ತರಿಸುವುದರಿಂದ ಮುಳುಗಡೆಯಾಗುವ ಜಮೀನುಗಳನ್ನು ಒಪ್ಪಂದ ಐತೀರ್ಪಿನ ಮುಖಾಂತರ ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗುವುದು. ಅಲ್ಲದೇ, 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮಗೊಂಡಿದ್ದು, ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.
ಕಳಸಾ-ಬಂಡೂರಾ ನಾಲಾ ತಿರುವು ಯೋಜನೆಯಡಿ 3.9 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಸರ್ಕಾರದಿಂದ ತೀರುವಳಿಗಳನ್ನು ನಿರೀಕ್ಷಿಸಿ ಈಗಾಗಲೇ ಯೋಜನಾ ಕಾಮಗಾರಿಗಳನ್ನು ಕೆಲವು ಷರತ್ತುಗಳೊಂದಿಗೆ ಗುತ್ತಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಇರುವ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದರು.
ಕೃಷ್ಣಾ ಕಣಿವೆಯ ಅನುಷ್ಠಾನ ಹಂತದಲ್ಲಿರುವ ಆಧುನೀಕರಣ ಹಾಗೂ ಏತ ನೀರಾವರಿ ಯೋಜನೆಗಳನ್ನು ಯೋಜನೆಯಡಿ ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು. ಜಲಸಂಪನೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡಗಳನ್ನು ಜಾರಿಗೊಳಿಸಲಾಗುವುದು.
ತುಂಗಭದ್ರಾ ಜಲಾಶಯದಲ್ಲಿ ತುಂಬಿರುವ ಹೂಳಿನಿಂದಾಗಿ ನೀರಿನ ಸಂಗ್ರಹಣೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಕೊಪ್ಪಳ ಜಿಲ್ಲೆಯಲ್ಲಿ ನವಲಿ ಸಮತೋಲನಾ ಜಲಾಶಯ ನಿರ್ಮಾಣವೂ ಸೇರಿದಂತೆ ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಲಾಗುವುದು. ರಾಜ್ಯದ ಪ್ರಮುಖ ಅಣೆಕಟ್ಟು ಗೇಟುಗಳ ಸದೃಢತೆಯನ್ನು ತಾಂತ್ರಿಕ ಪರಿಶೀಲನೆಗೊಳಪಡಿಸಿ ಅಗತ್ಯ ಕಂಡುಬಂದಲ್ಲಿ ಗೇಟುಗಳನ್ನು ದುರಸ್ತಿಗೊಳಿಸಲು ಮತ್ತು ಬದಲಿಸಲು ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.