ಬೆಂಗಳೂರು,ಫೆ.18- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಂಸದ ಡಿ.ಕೆ.ಸುರೇಶ್ ಮತ್ತಿತರ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಮಲ್ಲಿಕಾರ್ಜುನ ಖರ್ಗೆಯವರ ಮನೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮ್ಮದ್ ಅವರೊಂದಿಗೆ ತೆರಳಿದ ಸಚಿವ ಜಮೀರ್ ಅಹಮ್ಮದ್ ಖಾನ್ ರಾಜ್ಯ ರಾಜಕೀಯದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಬ್ಬರು ನಾಯಕರು ಖರ್ಗೆಯವರಿಗೆ ಸುದೀರ್ಘ ವಿವರಣೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬದಲಾವಣೆ ಕುರಿತಂತೆ ಕೆಲವು ಸಚಿವರು ನೀಡುತ್ತಿರುವ ಹೇಳಿಕೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಅಲ್ಲಲ್ಲಿ ನಡೆಯುತ್ತಿರುವ ಚರ್ಚೆಗಳ ಕುರಿತಂತೆ ಈ ವೇಳೆ ವಿಚಾರ ವಿನಿಮಯ ನಡೆದಿದೆ ಎಂದು ಮೂಲಗಳು ತಿಳಿಸಿದೆ.
ಮುಂದಿನ ದಿನಗಳಲ್ಲಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದ್ದು, ಆ ವೇಳೆ ಕಾಂಗ್ರೆಸ್‌ಗೆ ಅನುಕೂಲವಾಗಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು
ಮುಂದುವರೆಸುವ ಅಗತ್ಯವಿದೆ ಎಂದು ಈ ವೇಳೆ ಜಮೀರ್ ಅಹಮ್ಮದ್ ಖಾನ್ ಪ್ರತಿಪಾದಿಸಿರುವುದಾಗಿ ತಿಳಿದುಬಂದಿದೆ.
ಪಕ್ಷದಲ್ಲಿ ಪದೇಪದೇ ಉಂಟಾಗುತ್ತಿರುವ ಗೊಂದಲಗಳಿಗೆ ಹೈಕಮಾಂಡ್ ಮಧ್ಯ ಪ್ರವೇಶ ಮಾಡಿ ಕಡಿವಾಣ ಹಾಕಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಇದಾದ ಬಳಿಕ ಡಿ.ಕೆ.ಶಿವಕುಮಾರ್ ಅವರ ಸಹೋದರರೂ ಆಗಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಗೃಹಸಚಿವ ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಲ್ಲಿ ಉಳಿದುಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.